
ಬೆಳಗಾವಿ
ಬೆಳಗಾವಿ ಚಳಿಗಾಲದ ಅಧಿವೇಶನವೇ ಸಿಎಂ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಗುರುವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಡಾ ಹಗರಣದಲ್ಲಿ ಭ್ರಷ್ಟಾಚಾರ ನಡೆಸಿ ಒಂದನೇ ಆರೋಪಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹರಾಜಿಗಿದೆ. ಯಾರಾಗ್ತಾರಂತೆ ಗೊತ್ತಿಲ್ಲ ನೋಡೋಣ ಎಂದರು.
ಸರಕಾರದಲ್ಲಿ ದುಡ್ಡು ಇಲ್ಲ. ಶಾಸಕರಿಗೆ ಅನುದಾನದ ಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಗುತ್ತಿಲ್ಲ ಎಂದು ಹರಿಹಾಯ್ದರು.
ನಮ್ಮ ಬಳಿ 66 ಶಾಸಕರಿದ್ದಾರೆ. ನಮ್ಮ ಮೇಲೆ ವಿನಾಕಾರಣ ಆರೋಪ ಮಾಡ್ತಿದೆ ಕಾಂಗ್ರೆಸ್. ಬಿಜೆಪಿಯವರು ಕಾಂಗ್ರೆಸ್ ಶಾಸಕರನ್ನು ಖರೀಸಲು 50 ಕೋಟಿ, 100 ಕೋಟಿ ರೂ. ಆಫರ್ ಎಂದು ಕಾಂಗ್ರೆಸ್ ನವರು ಬಿಂಬಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಭೀತಿ ಇದೆ. ಆದ್ದರಿಂದ ಇಂಥ ಅಪಪ್ರಚಾರ ನಡೆಸಿದ್ದಾರೆ. ಸರಕಾರದಲ್ಲಿರುವ ಶಾಸಕರನ್ನು ನಾವು ಯಾರೂ ಸಂಪರ್ಕ ಮಾಡಿಲ್ಲ ಎಂದರು.
ಚಳಿಗಾಲದ ಅಧಿವೇಶನದಲ್ಲಿ ಸರಕಾರ ಇಕ್ಕಟ್ಟಿಗೆ ಸಿಲುಕಿಸಲು ನಾವು ಸನ್ನದ್ದರಾಗಿದ್ದೇವೆ. ರಾಜ್ಯ ಸರಕಾರ ಕಿತ್ತೂರು ಕರ್ನಾಟಕ, ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಮಾಜಿ ಶಾಸಕ ಸಂಜಯ ಪಾಟೀಲ್, ಮುರುಗೇಂದ್ರಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
