ಕನ್ನಡಮ್ಮ ಸುದ್ದಿ-ಕೊಪ್ಪಳ : ಮಳೆಯಿಂದಾಗಿ ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳನ್ನು ಬಾಕಿ ಉಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ವಹಿಸಿ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ರೈತರ ಬೇಡಿಕೆಯಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅವಶ್ಯವಿರುವ ಬೆಡ್‌ಗಳ ವ್ಯವಸ್ಥೆ ಮಾಡಬೇಕು. ಬಿಪಿಎಲ್ ನಿಂದ್ ಎಪಿಎಲ್ ಹಾಗೂ ಆದಾಯ ತೆರೆಗಿ ಪಾವತಿದಾರರ ಕಾರ್ಡ್‌ಗಳು ರದ್ದಾಗಿದ್ದು, ಈ ಬಗ್ಗೆ ಪರಿಶೀಲಿಸಬೇಕು. ರದ್ದಾದ ಪಟ್ಟಿಯಲ್ಲಿ ಜಿಲ್ಲೆಯ ಯಾವುದೇ ಅರ್ಹ ಫಲಾನುಭವಿಗಳ ಪಡಿತರ ಚೀಟಿ ಸೇರಿದ್ದರೆ ಅವರಿಗೆ ಮತ್ತೆ ಬಿಪಿಎಲ್ ಕಾರ್ಡ್ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳಲು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಲಾಭವು ಜನತೆಗೆ ತಲುಪುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರಿದ್ದರು.
