* ಅಸ್ಪೃಶ್ಯತೆ ಆಚರಣೆ , ದೌರ್ಜನ್ಯಕ್ಕೆ ಕಡಿವಾಣ ಸಚಿವ ಶಿವರಾಜ ತಂಗಡಿ ಭರವಸೆ
ಕನ್ನಡಮ್ಮ ಸುದ್ದಿ-ಕೊಪ್ಪಳ:: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳು ಸೇರಿ ಅಸ್ಪೃಶ್ಯತೆ ಆಚರಣೆ ಘಟನೆಗಳು ಮುಂದುವರೆದಿರುವ ಬಗ್ಗೆ ದಲಿತ ಸಮುದಾಯದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯಬಾರದು ಎಂಬ ಉದ್ದೇಶದಿಂದ ಭಾನುವಾರ ಜಿಲ್ಲೆಯ ವಿವಿಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ
ಅಧ್ಯಕ್ಷತೆಯಲ್ಲಿನ ಸಭೆಯಲ್ಲಿ ಇನ್ನೂ ಮುಂದೆ ಯಾವುದೇ ಘಟನೆಗಳು ಜರುಗದಂತೆ ನಿರ್ದಾಕ್ಷಣ್ಯವಾಗಿ ಕ್ರಮದ ಎಚ್ಚರಿಕೆ ನೀಡಲಾಯಿತು.
ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಗಟ್ಟುವ ಕುರಿತು ದಲಿತ ಮುಖಂಡರು, ಕಂದಾಯ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಕಳೆದ ಮೂರು ವರ್ಷದಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳು 2021 ರಲ್ಲಿ 50, 2022 ರಲ್ಲಿ 64, 2023 ರಲ್ಲಿ 41 ಹಾಗೂ 2024ರ ಡಿಸೆಂಬರ್ ವರೆಗೆ 61 ಪ್ರಕರಣಗಳು ವರದಿಯಾಗಿರುವ ಅಂಕಿಅಂಶಗಳು ಬೆಳಕಿಗೆ ಬಂದಿದೆ.
ಎಸ್.ಸಿ. ಹಾಗೂ ಎಸ್.ಟಿ ಜನಾಂಗದವರ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಮುದಾಯದವರು ನೀಡಿದ ಸಲಹೆಗಳಿಂದ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಅನುಕೂಲವಾಗುತ್ತದೆ ದಲಿತರ ಮೇಲೆ ಯಾವುದೇ ರೀತಿಯ ದೌರ್ಜನ್ಯ ಆಗಬಾರದು. ದೌರ್ಜನ್ಯ ಪ್ರಕರಣಗಳಲ್ಲಿ ಕೊಲೆಗಳು ನಡೆಯುತ್ತಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಕಳವಳ ವ್ಯಕ್ತಪಡಿಸಿದ್ದು
ದೌರ್ಜನ್ಯಗಳು ನಡೆಯದಂತೆ ಗ್ರಾಮ ಮಟ್ಟದಿಂದ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದಿದ್ದಾರೆ.
ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ಪ್ರತಿ ತಿಂಗಳು 2ನೇ ರವಿವಾರದಂದು ಒಂದು ಗ್ರಾಮ ಪಂಚಾಯತ್ ಅಥವಾ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಎಲ್ಲಾ ಸಮುದಾಯದವರನ್ನು ಕರೆದು ಸಭೆ ನಡೆಸಿ. ಎಸ್ಸಿ, ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ವಿನಃ ಕಾರಣ ವಿಳಂಭ ಮಾಡಬಾರದು. ಒಂದು ವೇಳೆ ವಿಳಂಭ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷ್ಯಣೀಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.
ಸಂಸದ ಕೆ.ರಾಜಶೇಖರ ಹಿಟ್ನಾಳ ಅವರು ಮಾತನಾಡಿ, ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಆಯಾ ಗ್ರಾಮದ ಎಲ್ಲಾ ಸಮಾಜದ ಮುಖಂಡರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳ ಶಾಂತಿ ಸಭೆ ನಡೆಸುವುದರ ಜೊತೆಗೆ ಜನ ಜಾಗೃತಿ ಮತ್ತು ಮುಂದೆ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗೃತೆ ವಹಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಮೊದಲಿಗೆ ಸಂವಿಧಾನದ ಪಿಠಿಕೆಯನ್ನು ಓದುವ ಮೂಲಕ ಸಭೆಯನ್ನು ಆರಂಭಿಸಲಾಯಿತು. ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಹೆಚ್ಚುವರಿ ಎಸ್ಪಿ ಆರ್.ಹೇಮಂತ ಕುಮಾರ್, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಸಿದ್ದನಗೌಡ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶೀಲ್ದಾರರು, ಪೊಲೀಸ್ ಠಾಣೆಗಳ ಸಿ.ಪಿ.ಐ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
**** ಸ್ವಾತಂತ್ರ್ಯ ಸಿಕ್ಕು 70 ವರ್ಷಗಳ ಮೇಲಾಗಿದ್ದರೂ ಇನ್ನೂ ಅಸ್ಪೃಶ್ಯತೆ ಜಾರಿಯಲ್ಲಿರುವುದು ವಿಷಾದನೀಯ ಸಂಗತಿಯಾಗಿದೆ. ನಾವೆಲ್ಲರೂ ಒಂದೆ ಎನ್ನುವ ಭಾವನೆ ಜನರಲ್ಲಿ ಬರಬೇಕು. ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು : ಶಿವರಾಜ ತಂಗಡಗಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು.*****
