ಕನ್ನಡಮ್ಮ ಸುದ್ದಿ-ಕೊಪ್ಪಳ : ಮಕ್ಕಳು ತಮ್ಮ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಸ್ಥಳೀಯ ಸರಕಾರಕ್ಕೆ ತಿಳಿಸಿ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಹೇಳಿದರು.
ತಾಲೂಕಿನ ಕಲ್ಲತಾವರಗೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ದನಕನದೊಡ್ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಉದ್ಘಾಟಿಸಿ ಮಾತನಾಡಿ, ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಲು ಹಾಗೂ ಮಕ್ಕಳ ಭಾಗವಹಿಸುವ ಹಕ್ಕುಗಳನ್ನು ಪ್ರೇರೆಪಿಸಲು ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಎಂಬ ವಿನೂತನವಾದ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪ್ರಕಾಶ ಕಡಗದ ಅವರು ಮಾತನಾಡಿ, ಸಂವಿಧಾನವು ಮಹಿಳೆ ಮತ್ತು ಮಕ್ಕಳಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಲು ನೀಡಿರುವ ಅವಕಾಶಗಳನ್ವಯ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣಕ್ಕಾಗಿ, ಮಕ್ಕಳ ರಕ್ಷಣೆ, ಮಕ್ಕಳ ಭಾಗವಹಿಸುವಿಕೆಯ ಹಕ್ಕುಗಳನ್ನು ಖಾತ್ರಿಪಡಿಸಲು 2024 ನವೆಂಬರ್ 14 ರಿಂದ 2025ರ ಜನೆವರಿ 24 ರವರೆಗೆ 10 ವಾರಗಳ ಮಕ್ಕಳಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಹಾಗೂ ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಲು ಆದೇಶ ನೀಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಗಂಗಪ್ಪ ನಾಯಕ್, ಗ್ರಾಮೀಣ ಉದ್ಯೋಗ್ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ವೆಂಕೋಬ, ಪ್ರತಿಭಾ ಕಾಶಿಮಠ, ಶಿವಶರಣಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಯಮನೂರಪ್ಪ ಕಬ್ಬಣ್ಣವರ್ ಇದ್ದರು.
