ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ, ಬೇಟಿ ಬಚಾವೋ ಬೇಟಿ ಪಡಾವೋ
ಕನ್ನಡಮ್ಮ ಸುದ್ದಿ-ಕೊಪ್ಪಳ : ಮಹಿಳೆಯರು ಎಲ್ಲಾ ಕ್ಷೇತರದಲ್ಲಿಯೂ ಅವಿರತ ಶ್ರಮದಿಂದ ಸಾಧನೆಯಲ್ಲಿದ್ದು, ಕೇವಲ ಸರ್ಕಾರಗಳ ಸೌಲಭ್ಯದಿಂದ ಸಬಲೀಕರಣ ಸಾಧ್ಯವಿಲ್ಲ, ಮುಖ್ಯವಾಹಿನಿಗೆ ಬರಲು ಸಮಾಜದ ಸಹಕಾರ ಬಹು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹ ಲಕ್ಷ್ಮೀ. ಶಕ್ತಿ ಯೋಜನೆಯಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಇದರಿಂದ ತಮಗೆ ಬಹಳಷ್ಟು ಅನುಕೂಲವಾಗಿದೆ. ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಿದಾಗ ಅವರಿಗೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ತಮಗೆಲ್ಲರಿಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಶುಭಾಶಯಗಳು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ ಅವರು ಮಾತನಾಡಿ, ನಮ್ಮ ಸಮಾಜದಲ್ಲಿ ಹೆಣ್ಣು ಮಗು ಬೇಡ ಗಂಡು ಮಗು ಬೇಕು ಎಂಬ ಅಭಿಪ್ರಾಯ ಇದೆ. ಇಲ್ಲಿ ಇಬ್ಬರ ಪಾತ್ರವು ಬಹಳ ಮುಖ್ಯ. ಮಕ್ಕಳಿಗೆ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣ ಕೊಡಬೇಕು ಎಂದು ಹೇಳಿದರು.
ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ನಮ್ಮ ದೇಶ ಉಜ್ಚಲವಾಗಿ ಬೆಳೆಯಬೇಕಾದರೆ ಮಹಿಳೆ ಅಥವಾ ತಾಯಿಯ ಪಾತ್ರ ಬಹಳ ಮುಖ್ಯ ಇದೆ. ಅನೇಕ ಮಹಿಳೆಯರು ದೇಶಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದು ಹೇಳಿದರು.
ಅಂಗನವಾಡಿ ಚಿಣ್ಣರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಲಗೇರಿ 3ನೇ ಅಂಗನವಾಡಿ ಕೇಂದ್ರದ ಮಗು ಪ್ರತಿಕ್ಷ್ಯಾ ಸಂವಿಧಾನ ಪೀಠಿಕೆಯ ಓದುವ ಮೂಲಕ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ವಾಯ್ ಶೆಟ್ಟೆಪ್ಪನವರ, ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಅನ್ನಪೂರ್ಣಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತ ಪೂಜಾರ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಅನಿತಾ. ಇತರರು ಇದ್ದರು.
