ಕನ್ನಡಮ್ಮ ಸುದ್ದಿ-ಕೊಪ್ಪಳ : ಭಾರತದ ಪ್ರಜಾಪ್ರಭುತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಮಂಗಲ ಪಾಂಡೇ, ನೇತಾಜಿ ಸುಭಾಷಚಂದ್ರ ಭೋಸ್, ಭಗತ್‌ಸಿಂಗ್, ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಬ್ ಬಾಯ್ ಪಟೇಲ್ ಸೇರಿದಂತೆ ಇನ್ನೂ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ 1947ರ ಆಗಸ್ಟ್ 15 ರಂದು ನಮ್ಮ ದೇಶ ಸ್ವಾತಂತ್ರ್ಯ ಕಂಡಿತು. ಬಳಿಕ ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅವಿರತ ಪರಿಶ್ರಮದ ಫಲವಾಗಿ 1950ರ ಜನವರಿ 26 ರಂದು ಭಾರತದ ಆಡಳಿತಕ್ಕೆ ಕೈಗನ್ನಡಿಯಾಗಿರುವ ಭಾರತದ ಸಂವಿಧಾನವನ್ನು ಅಂಗೀಕರಿಸಲಾಯಿತು. ಈ ದಿನವನ್ನು ನಾವು ಗಣರಾಜ್ಯ ದಿನವನ್ನಾಗಿ ಆಚರಿಸುತ್ತಾ ಬಂದಿದ್ದೇವೆ ಎಂದರು.
*ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ:* ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಸಚಿವರು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
*ಆಕರ್ಷಕ ಪಥಸಂಚಲನ:* 76ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ & ಗೈಡ್ಸ್ ತಂಡಗಳು ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.
*ವಿವಿಧ ಇಲಾಖೆಗಳ ಪ್ರಗತಿಯ ಪುಸ್ತಕ ಬಿಡುಗಡೆ:* ಕೊಪ್ಪಳ ಜಿಲ್ಲಾಡಳಿತವು ಹೊರತಂದ ವಿವಿಧ ಇಲಾಖೆಗಳ ಪ್ರಗತಿ ಮಾಹಿತಿಯನ್ನೊಳಗೊಂಡ `ವಿಕಾಸ್’ ಎಂಬ ಪುಸ್ತಕವನ್ನು ಸಚಿವರು, ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು
ಸಾಂಸ್ಕೃತಿಕ ಕಾರ್ಯಕ್ರಮ, ಬಹುಮಾನ ವಿತರಣೆ: ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕೊಪ್ಪಳದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮತ್ತು ಜ್ಞಾನಬಂಧು ಪಿಯು ಕಾಲೇಜು ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಿದರು. ಪಥಸಂಚಲನದಲ್ಲಿ ಭಾಗವಹಿಸಿದ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
==*ಸನ್ಮಾನ:* 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾವನಾಗಿರುವ ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ಶಿಳ್ಳೇಕ್ಯಾತರ ಅವರಿಗೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತರಾದ ಹೆಚ್.ಎಸ್.ಹರೀಶ್ ಹಾಗೂ ಸೀರಾಜ್ ಬಿಸರಳ್ಳಿ ಮತ್ತು ಅಕಾಡೆಮಿಯ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತ ಮೋಹಮ್ಮದ್ ಅಖೀಲ್ ಉಡೇವು ಮತ್ತು ಇತರೆ ಸಾಧಕರಿಗೂ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಗುಪ್ತಾ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತಿರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪಸ್ಥಿತರಿದ್ದರು.
