
ಬೆಳಗಾವಿ
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು.
ಭಾನುವಾರ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ.ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.
ಹಲಗಾ ಎಸ್.ಟಿ.ಪಿ. ಕಾಮಗಾರಿಗೆ ಸಂಬಂಧಿಸಿದಂತೆ ಹೆಚ್ಚಿನ ಜಮೀನು ಭೂಸ್ವಾಧೀನ ಪರಿಹಾರ ಒದಗಿಸಲು ಅನುಕೂಲವಾಗುವಂತೆ ಹೆಚ್ಚಿನ ಪರಿಹಾರ ನೀಡಲು ಕಡತವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯದಲ್ಲಿ ಒಟ್ಟಾರೆ 6928 ಕೋಟಿ ರೂಪಾಯಿ ಸ್ಮಾರ್ಟ್ ಸಿಟಿ ಯೋಜನೆಗೆ ಬಿಡುಗಡೆಯಾಗಿದ್ದು, ಇದರಲ್ಲಿ 3500 ಕೋಟಿ ರಾಜ್ಯದ ಪಾಲು ಇದೆ ಎಂದರು.
ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಡಿ ಅತ್ಯಾಧುನಿಕ ಕಲಾ ಮಂದಿರ ಹಾಗೂ ವಾಣಿಜ್ಯ ಮಳಿಗೆ ಸ್ಥಾಪಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ಕಲಾಮಂದಿರದ ಇದಾಗಿದೆ ಎಂದರು.
ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಹೇಳಿದರು.
ರಾಜ್ಯದ ಎಲ್ಲೆಡೆ ವಾಣಿಜ್ಯ ಸಂಕೀರ್ಣ, ಬಸ್ ನಿಲ್ದಾಣ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಸಾರ್ವಜನಿಕರು ಈ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲ ಪೌರಕಾರ್ಮಿಕರರಿಗೆ ಸ್ಥಳೀಯ ಸಂಸ್ಥೆಗಳ ಮೂಲಕವೇ ವೇತನ ನೀಡುವುದರ ಜತೆಗೆ ಅವರನ್ನು ಸರಕಾರಿ ನೌಕರರಾಗಿ ಪರಿಗಣಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಎರಡು ದಾಖಲೆಗಳಿದ್ದರೆ ಕ್ರಯಪತ್ರ ಜತೆಗೆ ವಿದ್ಯುತ್ ಹಾಗೂ ನೀರು ಸರಬರಾಜು ಬಿಲ್ ಗಳನ್ನು ಕೂಡ ಪರಿಗಣಿಸಿ ಇ-ಖಾತೆ ಮಾಡಿಕೊಡಲು ಸರಕಾರ ನಿರ್ಧರಿಸಿದೆ ಎಂದರು.
ಬೆಳಗಾವಿ ನಗರದಲ್ಲಿ 50 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಇ-ಖಾತೆ ಮಾಡಿಕೊಡಲಾಗುವುದು. ತಲಾ 200 ಕೋಟಿ ರೂಪಾಯಿಯಂತೆ ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಒಟ್ಟಾರೆ 200 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದರು.
ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಚೆಲುವನಾರಾಯಣಸ್ವಾಮಿ, ಶಾಸಕರಾದ ಆಸೀಫ್ ಸೇಠ, ಅಶೋಕ ಪಟ್ಟಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
