
ಬೆಳಗಾವಿ
ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಂಸದ ಗೋವಿಂದ್ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲದೆ, ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ರಾಷ್ಟ್ರೀಯ ಅಧ್ಯಕ್ಷರಿಗೆ ರವಾನಿಸಲಾಗಿದೆ ಎಂದರು. ಇಂದು ಅಥವಾ ನಾಳೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಮನಸ್ಸು ಗೆದ್ದು ಅಧಿಕಾರಕ್ಕೆ ಬಂದರೂ, ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸಿದರು. ಬೆಲೆ ಏರಿಕೆಯಿಂದ ಬಡವರು ಸಂಕಷ್ಟಕ್ಕೆ ಸಿಲುಕಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ಟೀಕಿಸಿದರು.
ಮೀಸಲಾತಿ ವಿಷಯದಲ್ಲಿಯೂ ಸರ್ಕಾರ ಹಿಂದುಳಿದ ಸಮಾಜಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಕಾರಜೋಳ, ದಲಿತರು ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೀಡಿದ್ದ ಹಕ್ಕುಗಳನ್ನು ಹಿಂಪಡೆಯಲಾಗಿದೆ ಎಂದು ಹೇಳಿದರು. ಅಲೆಮಾರಿ ಸಮುದಾಯದ ಮೀಸಲಾತಿ ಕಡಿತ ಹಾಗೂ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಮೀಸಲಾತಿ ವ್ಯವಸ್ಥೆಯನ್ನು ಬದಲಾಯಿಸಿರುವುದನ್ನು ಅವರು ಖಂಡಿಸಿದರು.
ದಾವಣಗೆರೆಯಲ್ಲಿ ಅಲ್ಪಸಂಖ್ಯಾತರ ಸಭೆಗೆ ಅವಕಾಶ ನೀಡದ ಘಟನೆಗೂ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಹೆಚ್ಚಾಗಿದೆ ಎಂದರು. ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಆಡಳಿತ ಕುಸಿದಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಸರ್ಕಾರ ಒಳಜಗಳದಲ್ಲಿ ತೊಡಗಿ ಜನಪರ ಆಡಳಿತ ಮರೆತಿದೆ ಎಂದು ವಾಗ್ದಾಳಿ ನಡೆಸಿದರು.
ಗ್ಯಾಸ್ ಸರಬರಾಜು ಕುರಿತು ಮಾತನಾಡಿದ ಅವರು, ಡೊಮೆಸ್ಟಿಕ್ ಗ್ಯಾಸ್‌ಗೆ ಯಾವುದೇ ತೊಂದರೆ ಇಲ್ಲದಿದ್ದರೂ, ಕಮರ್ಷಿಯಲ್ ಗ್ಯಾಸ್ ಸಮಸ್ಯೆ ಶೀಘ್ರದಲ್ಲೇ ಸರಿಯಾಗಲಿದೆ ಎಂದು ತಿಳಿಸಿದರು. ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕಾಲದ ನೀತಿಗಳನ್ನು ಕಾಂಗ್ರೆಸ್ ನೆನಪಿಸಿಕೊಳ್ಳಬೇಕು ಎಂದು ಹೇಳಿದರು.
