
ಬೆಳಗಾವಿ
ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಬೆಳಗಾವಿ ಎಸಿ ನೇತೃತ್ವದ ತಂಡ ಪೂರ್ಣಗೊಳಿಸಿದೆ. ಸುಮಾರು 45 ಸಾವಿರ ಜನರಿಂದ ಅಂದಾಜು 4,600 ಕೋಟಿ ರೂಪಾಯಿ ಹೂಡಿಕೆ ಸಂಗ್ರಹಿಸಿರುವ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ ಎನ್ನಲಾಗಿದೆ.
ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಕೋಟ್ಯಾಂತರ ರೂಪಾಯಿ ಹೂಡಿಕೆ ಸ್ವೀಕರಿಸಿರುವ ಆರೋಪದ ಹಿನ್ನೆಲೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಆದೇಶದ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಕೇವಲ 24 ಗಂಟೆಗಳ ಅವಧಿಯಲ್ಲಿ ದಾಖಲೆಗಳ ಪರಿಶೀಲನೆ ಹಾಗೂ ಪ್ರಾಥಮಿಕ ತನಿಖೆಯನ್ನು ಅಧಿಕಾರಿಗಳು ಪೂರ್ಣಗೊಳಿಸಿದ್ದಾರೆ.
ಕಂದಾಯ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ನಾಲ್ಕು ಬ್ಯಾಂಕ್ ಖಾತೆಗಳು, ಎರಡು ಕಚೇರಿಗಳು, ಒಂದು ಅಪಾರ್ಟ್ಮೆಂಟ್ ನಿವಾಸ ಹಾಗೂ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಂಪ್ಯೂಟರ್, ಲ್ಯಾಪ್‌ಟಾಪ್, ಹೂಡಿಕೆ ಸಂಬಂಧಿತ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.
ಇಂದೇ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲು ಬೆಳಗಾವಿ ಎಸಿ ಶ್ರವಣಕುಮಾರ ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
