ಹುಬ್ಬಳ್ಳಿ: ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ. ಹರಿಪ್ರಸಾದ್ ಅವರು ಪ್ರಥಮ ಬಾರಿಗೆ ಹುಬ್ಬಳ್ಳಿ-ಧಾರವಾಡ ಗ್ರಾಮೀಣ ಪ್ರದೇಶಕ್ಕೆ ಆಗಮಿಸಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಸಂತಸ ಮೂಡಿಸಿದೆ ಎಂದು ಕಾಂಗ್ರೆಸ್ ನಾಯಕಿ ಶಿವಲೀಲಾ ಕುಲಕರ್ಣಿ ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆದ ಎಸ್‌ಐಆರ್ (ವಿಶೇಷ ಮತದಾರರ ತಿದ್ದುಪಡಿ) ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಮತ ಪರಿಷ್ಕರಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಬಹುಕಾಲದಿಂದ ಮತದಾರರ ಹಕ್ಕುಗಳ ಸಂರಕ್ಷಣೆಗಾಗಿ ಹೋರಾಟ ನಡೆಸುತ್ತಿದ್ದು, ಅದರ ಫಲವಾಗಿ ಈ ರೀತಿಯ ಜನಜಾಗೃತಿ ಕಾರ್ಯಕ್ರಮಗಳು ಯಶಸ್ಸು ಕಾಣುತ್ತಿವೆ ಎಂದರು. ಮತ ಪರಿಷ್ಕರಣೆ ಹಾಗೂ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕುರಿತು ಪ್ರತಿಕ್ರಿಯಿಸಿದ ಶಿವಲೀಲಾ ಕುಲಕರ್ಣಿ, “ಪಕ್ಷದ ಕೃಪೆ ಹಾಗೂ ದೇವರ ಆಶೀರ್ವಾದದಿಂದ ವಿನಯ್ ಕುಲಕರ್ಣಿ ಅವರು ಶೀಘ್ರದಲ್ಲೇ ಎಲ್ಲಾ ಆರೋಪಗಳಿಂದ ಮುಕ್ತರಾಗಿ ಜನಸೇವೆಗೆ ಮತ್ತೊಮ್ಮೆ ಸಕ್ರಿಯವಾಗಿ ಮರಳಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.
