
ಶಿವಮೊಗ್ಗ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಶಿವಮೊಗ್ಗದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರಿಗೆ ಸಂಬಂಧಿಸಿದ ಕಚೇರಿ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು.
ಶಿವಮೊಗ್ಗದ ಆಲ್ಕೋಳದಲ್ಲಿರುವ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಶಂಕರ್ ರೇಂಜ್ ಕಚೇರಿಗೆ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿ ಎಸಿಎಫ್ ಕಿರಣ್ ಅಂಗಡಿ ಅವರ ಕಚೇರಿಯಲ್ಲಿದ್ದ ಕಡತಗಳು, ದಾಖಲೆಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸಿತು.
ಕಿರಣ್ ಅಂಗಡಿ ಅವರು ಸುಮಾರು ಒಂದು ವರ್ಷದ ಹಿಂದೆ ಧಾರವಾಡದಿಂದ ಬಡ್ತಿ ಪಡೆದು ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಕುರಿತು ಬಂದಿದ್ದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಮಾತ್ರವಲ್ಲದೆ, ಕಿರಣ್ ಅಂಗಡಿ ಅವರು ಈ ಹಿಂದೆ ಸೇವೆ ಸಲ್ಲಿಸಿದ್ದ ಧಾರವಾಡ ಸೇರಿದಂತೆ ವಿವಿಧ ಸ್ಥಳಗಳಲ್ಲಿಯೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಮನೆ, ಕಚೇರಿ ಹಾಗೂ ಇತರೆ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದ್ದು, ತಪಾಸಣೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಹಾಗೂ ವಶಪಡಿಸಿಕೊಂಡ ದಾಖಲೆಗಳ ವಿವರ ಬಹಿರಂಗವಾಗುವ ಸಾಧ್ಯತೆಯಿದೆ. ಈ ದಾಳಿ ಅರಣ್ಯ ಇಲಾಖೆಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
