
ಬೆಳಗಾವಿ
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ ಅವರಿಗೆ ಸ್ವಾಗತ ಕೋರಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ.ಶಿವಕುಮಾರ ಅವರ ಅಭಿಮಾನಿಗಳು ಗುರುವಾರ ನಾಲ್ಕು ಜೆಸಿಬಿ ಹಾಗೂ ಕ್ರೇನ್ ಮೂಲಕ ಹೂವಿನ ಸುರಿಮಳೆ ಗೈಯಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ವಿಮಾನ ನಿಲ್ದಾಣದ ಬಳಿ ಇರುವ ಸಾಂಬ್ರಾ ಗ್ರಾಮದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಭಿಮಾನಿಗಳು ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆಯೇ ಹೂವಿನ ಸುರಿಮಳೆಗೈದು ಭರ್ಜರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಇನ್ನೂ ಸಾಂಬ್ರಾ ಗ್ರಾಮದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ ಏರ್ಪಡಿಸಿದ್ದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸಾಂಬ್ರಾ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ, ಡಿ.ಕೆ.ಶಿವಕುಮಾರ ಅವರು ಈ ಹಿಂದೆ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದೆವು. ಇದೀಗ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಅವರ ಮೊದಲ ಭೇಟಿಯಲ್ಲೇ ಬೆಳಗಾವಿ ಜಿಲ್ಲೆಗೆ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ದೊರೆಯುವ ವಿಶ್ವಾಸವಿದೆ ಎಂದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಳೆದ 27 ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯಾದ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದು ಅವರ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಗ್ರಾಮೀಣ ಕ್ಷೇತ್ರದ ಜನರ ಸೇವೆ ಹಾಗೂ ಪಕ್ಷದ ಸಂಘಟನೆಯಲ್ಲಿ ಅವರ ಕೊಡುಗೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಅವಕಾಶ ನೀಡಲಾಗುತ್ತದೆ ಎಂಬ ವಿಶ್ವಾಸವಿದೆ. ರಾಜ್ಯದಲ್ಲಿ ಮಹಿಳಾ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
