
- ಬೆಳಗಾವಿ
ಬೈಲಹೊಂಗಲ ತಾಲೂಕಿನ ಮಾಟೊಳ್ಳಿ ಕ್ರಾಸ್ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮನೆಯೊಂದರ ಸಿಸಿ ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಚಿರತೆ ಜಾಕವೇಲ್ ಕಡೆಗೆ ತೆರಳಿರುವ ಮಾಹಿತಿ ಹಿನ್ನೆಲೆಯಲ್ಲಿ ಆ ಭಾಗದ ರೈತರು ಆತಂಕಗೊಂಡಿದ್ದಾರೆ.
ಚಿರತೆ ಸಂಚಾರದಿಂದಾಗಿ ಜಮೀನುಗಳಿಗೆ ತೆರಳಲು ರೈತರು ಹಿಂದೇಟು ಹಾಕುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಚಲನವಲನದ ಬಗ್ಗೆ ಪರಿಶೀಲನೆ ನಡೆಸಿ, ಅದನ್ನು ಸೆರೆಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ರೈತರು ಒತ್ತಾಯಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
