
ಬೆಳಗಾವಿ
ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತ ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಅಥಣಿ ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ರೈತ ಬಂಡು ಚವ್ಹಾಣ್ ಅವರು ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಟವರ್ ಏರಿ ಕುಳಿತರು. ಮಳೆ ಕೈಕೊಟ್ಟಿರುವ ಸಂದರ್ಭದಲ್ಲಿ ಕಾಲುವೆ ಮೂಲಕವೂ ನೀರು ಹರಿಯದ ಹಿನ್ನೆಲೆಯಲ್ಲಿ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿ ಬಂಡು ಚವ್ಹಾಣ್ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ರೈತ ಟವರ್ ಏರಿರುವ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಐಗಳಿ ಪೊಲೀಸರು ಧಾವಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರೈತನನ್ನು ಕೆಳಗಿಳಿಸಲು ಹರಸಾಹಸ ನಡೆಸಿದರು. ಬಳಿಕ ರೈತನ ಮನವೊಲಿಸುವಲ್ಲಿ ಯಶಸ್ವಿಯಾದ ಸಿಬ್ಬಂದಿ, ಸುರಕ್ಷಿತವಾಗಿ ಅವರನ್ನು ಕೆಳಗಿಳಿಸಿದರು.
ಕಾಲುವೆಗೆ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
