
ಬೆಳಗಾವಿ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಹಿಂಡಲಗಾ ಜೈಲಿನ ಮುಖ್ಯ ಅಧೀಕ್ಷಕರಿಗೆ ಅಧಿಕೃತ ಇ-ಮೇಲ್ ಬಂದಿದ್ದು, ಸ್ಥಳಾಂತರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಇ-ಮೇಲ್‌ನಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಆದಷ್ಟು ಬೇಗ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಕುರಿತು ಮಾಹಿತಿ ನೀಡಲಾಗಿದೆ ಎನ್ನಲಾಗಿದ್ದು, ಯಾವುದೇ ಸಮಯದಲ್ಲಾದರೂ ಪೊಲೀಸ್ ಎಸ್ಕಾರ್ಟ್ ಮೂಲಕ ಕರೆತರಬಹುದಾದ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಹೀಗಾಗಿ, ಪ್ರಜ್ವಲ್ ರೇವಣ್ಣ ಅವರನ್ನು ಯಾವಾಗ ಹಿಂಡಲಗಾ ಜೈಲಿಗೆ ಕರೆತರಲಾಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ. ಸ್ಥಳಾಂತರ ಪ್ರಕ್ರಿಯೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಇನ್ನೂ ಅಧಿಕೃತ ಸಮಯದ ಮಾಹಿತಿ ಲಭ್ಯವಾಗಿಲ್ಲ.
ಏಕಾಏಕಿ ಸ್ಥಳಾಂತರದ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಆದರೆ, ಸ್ಥಳಾಂತರದ ದಿನಾಂಕ ಮತ್ತು ಸಮಯದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಅಧಿಕೃತ ದೃಢೀಕರಣ ದೊರೆಯಬೇಕಿದೆ.
