
ಬೆಳಗಾವಿ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಳೆದ ನಾಲ್ಕು ದಶಕಗಳಿಂದ ಸಾಹಿತ್ಯ, ರಂಗಭೂಮಿ, ಕನ್ನಡ ಸಂಘಟನೆ ಹಾಗೂ ಧಾರ್ಮಿಕ ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾಹಿತಿ ಹಾಗೂ ರಂಗಭೂಮಿ ಸಂಘಟಕ ರವಿ ಕೋಟಾರಗಸ್ತಿ ಅವರಿಗೆ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ರವಿ ಕೋಟಾರಗಸ್ತಿ ಅವರು ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ನಿರಂತರ ಸೇವೆಯನ್ನು ಗುರುತಿಸಿ, ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕೇರಳದ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ನಡೆಯಲಿರುವ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ–2026, ಕೇರಳ–ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ನವೆಂಬರ್ 29ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ರವಿ ಕೋಟಾರಗಸ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿ ಸ್ವೀಕರಿಸಲು ಪ್ರತಿಷ್ಠಾನದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ.
