ಕೆಡಿಪಿ ಸಭೆ : ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಿರಲಿ
ಕನ್ನಡಮ್ಮ ಸುದ್ದಿ-ಕೊಪ್ಪಳ : ಜಿಲ್ಲೆಯ ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೊಪ್ಪಳ ಜಿಲ್ಲಾ ಮಟ್ಟದ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ವಸತಿ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ, ಕುಡಿಯುವ ನೀರು, ಬೆಡ್ ವ್ಯವಸ್ಥೆ, ಬಿಸಿ ನೀರಿನ ವ್ಯವಸ್ಥೆ ಹಾಗೂ ಇತರೆ ಅಗತ್ಯ ಮೂಲಭೂತ ಸೌಕರ್ಯಗಳು ಸರಿಯಾಗಿ ಒದಗಿಸಲು ತಿಳಿಸಿದ ಅವರು, ಜಿಲ್ಲೆಯಲ್ಲಿ ಕೆಲ ಮಕ್ಕಳ ಹಾಜರಾತಿ ಕಡಿಮೆ ಇದೆ. ಈ ಬಗ್ಗೆ ಆಯಾ ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಶಾಲೆಗೆ ಬಾರದೇ ಇರುವ ಮಕ್ಕಳ ಮನೆಗೆ ಭೇಟಿ ನೀಡುವಂತಾಗಬೇಕು ಹಾಗೂ ಮಕ್ಕಳ ಮತ್ತು ಅವರ ಪಾಲಕರ ಮನವಲಿಸಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಪ್ರಯತ್ನ ಮಾಡಬೇಕು ಎಂದರು.
ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ತೋಟಗಾರಿಕೆ ತರಬೇತಿ ಕೇಂದ್ರ ಸ್ಥಾಪನೆಯಾಗಬೇಕು. ತೋಟಗಾರಿಕೆ ಪಾರ್ಕ್ಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಬೇಕು. ಕುಷ್ಟಗಿ, ಯಲಬುರ್ಗಾ, ಕನಕಗಿರಿ ಹಾಗೂ ಇತರ ಪ್ರದೇಶಗಳಲ್ಲಿ ಬೆಳೆಯುತ್ತಿರುವ ತೋಟಗಾರಿಕೆ ಬೆಳೆಗಳಿಗೆ ಸರ್ಕಾರದ ಸಹಾಯಧನಗಳನ್ನು ನೀಡಲು ಕ್ರಮ ವಹಿಸಿ ಎಂದರು.
ಜಿಲ್ಲೆಯಲ್ಲಿ ಡೆಗ್ಯೂ ಪರೀಕ್ಷೆಗಾಗಿ ನಿಗದಿತ ದರಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಪಡೆಯುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ತೊಂದರೆ ಉಂಟಾಗುತ್ತಿದೆ. ಡೆಂಗ್ಯೂ ಪತ್ತೆ ಮಾಡುವ ಖಾಸಗಿ ಲ್ಯಾಬ್‌ಗಳಿಗೆ ಸರ್ಕಾರವು ನಿಗದಿಪಡಿಸಿರುವ ದರ ಮತ್ತು ಮಾರ್ಗಸೂಚಿಗಳನ್ನು ನೀಡಿ, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲುವಂತೆ ಸೂಕ್ತ ನಿರ್ದೇಶನ ನೀಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತ ಪಡೆಯುವ ಲ್ಯಾಬ್‌ಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಜಿಲ್ಲೆಯ ಕುಕನೂರು, ಕಾರಟಗಿ ಮತ್ತು ಕನಕಗಿರಿ ತಾಲ್ಲೂಕುಗಳಲ್ಲಿ ಮಂಜೂರಾಗಿರುವ 100 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.
ಕುಡಿಯುವ ನೀರಿನ ಸಮಸ್ಯೆಯಿದ್ದರೆ, ಮಾಹಿತಿ ನೀಡಿ. ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ತಮಗೆ ನೀಡಿದ ಕಾಲಮಿತಿಯಲ್ಲಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳು ಕೆಡಿಪಿ ಸಭೆಗೆ ಗೈರಾಗದೇ ಸ್ಪಷ್ಟ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಹೇಳಿದರು.
ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಸಂಸದರಾದ ರಾಜಶೇಖರ್ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ಜಿ.ಪಂ.ಸಿಇಒ ರಾಹುಲ್ ರತ್ನಂ ಪಾಂಡೇಯ, ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಕೊಪ್ಪಳ ಜಿಲ್ಲಾ ಮಟ್ಟದ ಕೆಡಿಪಿ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
