ಕನ್ನಡಮ್ಮ ಸುದ್ದಿ-ಕೊಪ್ಪಳ : ಜಿಲ್ಲಾ ಕೇಂದ್ರದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಜನವರಿ ಮಾಹೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸೂಚನೆ ನೀಡಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಶಿವಯೋಗಿ ಸಿದ್ದರಾಮೇಶ್ವರ ಮತ್ತು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
*ಶ್ರೀವಯೋಗಿ ಸಿದ್ದರಾಮೇಶ್ವರ ಜಯಂತಿ: ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಹಾಗೂ ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಕೊಪ್ಪಳ ಜಿಲ್ಲಾ ಮಟ್ಟದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆಯನ್ನು ಜ. 14ರ ಬದಲಿಗೆ ಜ. 31 ರಂದು ಆಯೋಜಿಸಲು ಕೋರಿದರು. ಅದರಂತೆ ಅಂದು ಬೆಳಿಗ್ಗೆ 8.30ಕ್ಕೆ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರದ ಮೇರವಣಿಗೆಯು ನಗರದ ಗವಿಸಿದ್ದೇಶ್ವರ ಮಠದ ಆವರಣದಿಂದ ಆರಂಭಗೊಂಡು ಸಾಹಿತ್ಯ ಭವನದವರೆಗೆ ಜರುಗಲಿದೆ. ಬಳಿಕ 10.30 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪೂಜೆ, ಶಿವಯೋಗಿ ಸಿದ್ದರಾಮೇಶ್ವರರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿವೆ.

*ಅಂಬಿಗರ ಚೌಡಯ್ಯ ಜಯಂತಿ:* ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜ.21ರಂದು ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ 8.30ಕ್ಕೆ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೇರವಣಿಗೆಯು ನಗರದ ಸಿರಸಪ್ಪಯ್ಯನ ಮಠದ ಆವರಣದಿಂದ ಆರಂಭಗೊಂಡು ಸಾಹಿತ್ಯ ಭವನದವರೆಗೆ ಜರುಗಲಿದೆ. ನಂತರ 10.30 ಗಂಟೆಗೆ ನಗರದ ಸಾಹಿತ್ಯ ಭನವದಲ್ಲಿ ನಡೆಯಲಿರುವ ವೇದಿಕೆ ಸಮಾರಂಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ, ವಿಶೇಷ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.
ಈ ಎರಡೂ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಗ್ರಾಮ ಪಂಚಾಯತ್ ಮತ್ತು ಇತರೆ ಕಛೇರಿಗಳಲ್ಲಿ ಆಚರಿಸುವಂತಾಗಬೇಕು. ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲಾ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

