
ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆ ಹಾಗೂ ಗಾಳಿಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ತಾಯಿ, ಮಗನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಬುಧವಾರ ನಡೆದಿದೆ.
ನೀಲವ್ವ ಯಲ್ಲಯ್ಯನವರ (70) ಮತ್ತು ಉಳವಪ್ಪ ಯಲ್ಲಯ್ಯನವರ (37) ಗಾಯಗೊಂಡವರು. ಮಂಗಳವಾರ ಸಂಜೆ ರಭಸವಾಗಿ ಬೀಸಿದ ಗಾಳಿ-ಮಳೆಯಿಂದ ಮನೆ ಪಕ್ಕದಲ್ಲಿದ್ದ ತೆಂಗಿನ ಮರ ಬೇರು ಸಮೇತ ಉರುಳಿ ಮನೆ ಮೇಲಕ್ಕೆ ಬಿದ್ದಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ನೀಲವ್ವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಗ ಉಳವಪ್ಪಗೂ ಗಾಯಗಳಾಗಿವೆ. ಮರ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯರು ಸಹಾಯದಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
