
ಬೆಳಗಾವಿ
ಜಿಲ್ಲೆಯಲ್ಲಿ ಶಿವಂ ಅಸೋಸಿಯೇಟ್ಸ್ ವಿರುದ್ಧ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದ ಪ್ರಕರಣ ರಾಜ್ಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ನೂ ನಾಲ್ಕು ಪೋಂಜಿ (ವಂಚಕ) ಕಂಪನಿಗಳ ವಿರುದ್ಧವೂ ದೂರುಗಳು ದಾಖಲಾಗಿರುವ ವಿಚಾರ ಹೊಸ ಸಂಚಲನ ಮೂಡಿಸಿದೆ.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ, ಶಿವಂ ಅಸೋಸಿಯೇಟ್ಸ್ ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಇನ್ನೂ ನಾಲ್ಕು ಕಂಪನಿಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದಿರುವುದಾಗಿ ತಿಳಿಸಿದ್ದರು. ಈ ಹೇಳಿಕೆಯ ಬಳಿಕ ಆ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿರುವ ಠೇವಣಿದಾರರಲ್ಲಿ ಆತಂಕ ಹೆಚ್ಚಾಗಿದೆ.
ಹೆಚ್ಚಿನ ಬಡ್ಡಿದರ, ಕಡಿಮೆ ಅವಧಿಯಲ್ಲಿ ದುಪ್ಪಟ್ಟು ಲಾಭ ಹಾಗೂ ಆಕರ್ಷಕ ಹೂಡಿಕೆ ಯೋಜನೆಗಳ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿರುವ ಆರೋಪ ಈ ಕಂಪನಿಗಳ ಮೇಲೆ ಕೇಳಿಬಂದಿದೆ. ಇದೀಗ ಕಂಪನಿಗಳ ಭವಿಷ್ಯದ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದಂತೆ ಠೇವಣಿದಾರರು ತಮ್ಮ ಹಣವನ್ನು ಸುರಕ್ಷಿತವಾಗಿ ಮರಳಿ ಪಡೆಯುವ ಚಿಂತೆಯಲ್ಲಿ ಮುಳುಗಿದ್ದಾರೆ.
ಮೂಲಗಳ ಪ್ರಕಾರ, ಹಲವು ವರ್ಷಗಳಿಂದ ಈ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿರುವ ಗ್ರಾಹಕರು ಇದೀಗ ಕಂಪನಿಗಳ ಕಚೇರಿಗಳಿಗೆ ಭೇಟಿ ನೀಡಿ ತಮ್ಮ ಠೇವಣಿ ಮೊತ್ತವನ್ನು ವಾಪಸ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಕೆಲವೆಡೆ ಕಂಪನಿ ಪ್ರತಿನಿಧಿಗಳೊಂದಿಗೆ ವಾಗ್ವಾದಗಳೂ ನಡೆದಿರುವ ಮಾಹಿತಿ ಲಭ್ಯವಾಗಿದೆ.
ವಿಶೇಷವಾಗಿ ನಿವೃತ್ತ ನೌಕರರು, ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಗೃಹಿಣಿಯರು ತಮ್ಮ ಜೀವನಪೂರ್ತಿ ಸಂಗ್ರಹಿಸಿದ್ದ ಹಣವನ್ನು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಈ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಶಿವಂ ಅಸೋಸಿಯೇಟ್ಸ್ ಪ್ರಕರಣ ಬೆಳಕಿಗೆ ಬಂದ ಬಳಿಕ ಇದೇ ರೀತಿಯ ಕಂಪನಿಗಳ ಮೇಲೂ ಅನುಮಾನಗಳು ಮೂಡತೊಡಗಿದ್ದು, ಠೇವಣಿದಾರರು ಎಚ್ಚೆತ್ತುಕೊಂಡಿದ್ದಾರೆ.
