
ಬೆಳಗಾವಿ
ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿರುವ ಐಪಿಎಲ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಪಂದ್ಯ ಮುಕ್ತಾಯದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯ ಗುಂಪುಗೂಡುವಿಕೆ, ಗಲಾಟೆ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ವಿಶೇಷ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ತಿಳಿಸಿದ್ದಾರೆ.
ಭಾನುವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಐಪಿಎಲ್ ಫೈನಲ್ ಬಳಿಕ ಅಭಿಮಾನಿಗಳು ಸಂಭ್ರಮಾಚರಣೆ ನಡೆಸುವ ನೆಪದಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಚನ್ನಮ್ಮ ವೃತ್ತ, ಆರ್ಪಿಡಿ ವೃತ್ತ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನಸಂದಣಿ ಉಂಟಾಗುವ ನಿರೀಕ್ಷೆ ಇರುವುದರಿಂದ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದಿದ್ದಾರೆ.
ಕೆಲವರು ಮದ್ಯಪಾನ ಮಾಡಿ ವಾಹನ ಚಾಲನೆ ನಡೆಸುವುದು, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವುದು ಹಾಗೂ ಗಲಾಟೆಗಳಿಗೆ ಕಾರಣವಾಗುವ ಘಟನೆಗಳು ಈ ಹಿಂದೆ ನಡೆದಿರುವ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ನಗರದ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ತಪಾಸಣೆ ನಡೆಸಲಾಗುವುದು. ಮದ್ಯಪಾನ ಮಾಡಿ ಸಾರ್ವಜನಿಕ ಶಾಂತಿ ಭಂಗ ಮಾಡುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಯಾವುದೇ ಅಹಿತಕರ ಘಟನೆಗಳು, ಹಲ್ಲೆ ಅಥವಾ ಚಾಕು ಇರಿತದಂತಹ ಪ್ರಕರಣಗಳು ನಡೆಯದಂತೆ ಆ್ಯಂಟಿ-ಸ್ಟ್ಯಾಬಿಂಗ್ ಸ್ಕ್ವಾಡ್ನ್ನು ಸಹ ನಗರದಲ್ಲಿ ನಿಯೋಜಿಸಲಾಗಿದೆ. ಈ ತಂಡವು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗಲಿದ್ದು, ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಲಿದೆ ಎಂದು ತಿಳಿಸಿದರು.
ಪಂದ್ಯ ಫಲಿತಾಂಶದ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸುವ ವೇಳೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು. ಸಾರ್ವಜನಿಕ ರಸ್ತೆಯಲ್ಲಿ ಬೈಕ್ಗಳ ಮೇಲೆ ಅಪಾಯಕಾರಿ ಸ್ಟಂಟ್ಗಳು, ಅತಿವೇಗದ ವಾಹನ ಚಾಲನೆ, ಪಟಾಕಿ ಸಿಡಿಸುವುದು, ಗಲಾಟೆ ಮಾಡುವುದು ಅಥವಾ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಯಾವುದೇ ಕೃತ್ಯಗಳನ್ನು ಸಹಿಸಲಾಗುವುದಿಲ್ಲ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದರು.
ನಗರದ ಶಾಂತಿ, ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಾಗರಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ತಮ್ಮ ಸಂಭ್ರಮವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು ಎಂದಿದ್ದಾರೆ.
