
ಬೆಳಗಾವಿ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಡಗೇರಿ ಗ್ರಾಮದಲ್ಲಿ ನಡೆದಿದ್ದ ಮಾಜಿ ಸೈನಿಕನ ಅನುಮಾನಾಸ್ಪದ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.
ಹೌದು. ಘಟನೆ ನಡೆದ ಮೂರು ತಿಂಗಳ ಬಳಿಕ ಅಧಿಕಾರಿಗಳು ಹೂತ್ತಿದ್ದ ಶವವನ್ನು ಹೊರತೆಗೆದು ಮರು ಪರೀಕ್ಷೆ ನಡೆಸಿದ್ದಾರೆ. ಬೆಳಗಾವಿ ಎಸಿ ಶ್ರವಣಕುಮಾರ ಸಮ್ಮುಖದಲ್ಲಿ ಶವದ ಅವಶೇಷಗಳನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ರವಾನಿಸಲಾಗಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಾಜಿ ಸೈನಿಕನಿಗೆ ಆಸ್ಪತ್ರೆಯಲ್ಲೇ ವಿಷ ನೀಡಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪ್ರಕರಣ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಮೃತ ವ್ಯಕ್ತಿಯನ್ನು ಸಂದೀಪ ಮಾಂಜರಿ ಎಂದು ಗುರುತಿಸಲಾಗಿದೆ. ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರೆಂದು ತಿಳಿದುಬಂದಿದೆ. ಕೆಲ ತಿಂಗಳ ಹಿಂದೆ ಹುಕ್ಕೇರಿ ಜಾತ್ರೆ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಸಂದೀಪ ರಸ್ತೆ ಅಪಘಾತಕ್ಕೊಳಗಾಗಿದ್ದರು. ಅಪಘಾತದಲ್ಲಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ ಸಂದೀಪ ಮೃತಪಟ್ಟಿದ್ದು, ಆರಂಭದಲ್ಲಿ ಇದನ್ನು ಸಾಮಾನ್ಯ ಅಪಘಾತ ಪ್ರಕರಣವೆಂದು ಪರಿಗಣಿಸಲಾಗಿತ್ತು. ಬಳಿಕ ಮೃತನ ಕುಟುಂಬಸ್ಥರಿಗೆ ಅನುಮಾನ ಮೂಡಿದ್ದು, ಸಾವಿನ ಹಿಂದೆ ಸಂಚು ಇರಬಹುದು ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಯಮಕನಮರಡಿ ಪೊಲೀಸರು ಇದೀಗ ಪ್ರಕರಣದ ವಿವಿಧ ಆಯಾಮಗಳನ್ನು ಪರಿಶೀಲಿಸುತ್ತಿದ್ದಾರೆ.
ಮೃತನ ಪತ್ನಿ ಸುಮಾ ಹಾಗೂ ಆಕೆಯ ಪ್ರಿಯಕರ ಎನ್ನಲಾಗಿರುವ ಪುಂಡಲೀಕ ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅನೈತಿಕ ಸಂಬಂಧ ಬಹಿರಂಗವಾಗಬಾರದು ಹಾಗೂ ಗಂಡ ಸಾವನ್ನಪ್ಪಿದರೆ ವಿಮೆ ಹಣ ಸಿಗುತ್ತದೆ ಎಂಬ ಉದ್ದೇಶದಿಂದ ಪೂರ್ವ ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕುಟುಂಬಸ್ಥರ ಆರೋಪದ ಪ್ರಕಾರ, ರಸ್ತೆ ಅಪಘಾತವನ್ನು ದಾಳವಾಗಿಸಿಕೊಂಡ ಆರೋಪಿಗಳು ಆಸ್ಪತ್ರೆಗೆ ದಾಖಲಾಗಿದ್ದ ಸಂದೀಪನಿಗೆ ವಿಷ ನೀಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡ ಅಧಿಕಾರಿಗಳು ಇದೀಗ ಮರು ತನಿಖೆಗೆ ಮುಂದಾಗಿದ್ದಾರೆ.
ಘಟನೆ ನಡೆದ ಮೂರು ತಿಂಗಳ ಬಳಿಕ ಅಧಿಕಾರಿಗಳು ಹೂತ್ತಿದ್ದ ಶವವನ್ನು ಹೊರತೆಗೆದು ಮರು ಪರೀಕ್ಷೆ ನಡೆಸಿದ್ದಾರೆ. ಬೆಳಗಾವಿ ಎಸಿ ಶ್ರವಣಕುಮಾರ ಸಮ್ಮುಖದಲ್ಲಿ ಶವದ ಅವಶೇಷಗಳನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ರವಾನಿಸಲಾಗಿದೆ. ವಿಷಪ್ರಯೋಗ ನಡೆದಿದೆಯೇ ಎಂಬುದನ್ನು ಪತ್ತೆಹಚ್ಚಲು ವೈಜ್ಞಾನಿಕ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಎಫ್ಎಸ್ಎಲ್ ವರದಿ ಬಂದ ಬಳಿಕವೇ ಇದು ಕೊಲೆ ಪ್ರಕರಣವೇ ಅಥವಾ ಸಹಜ ಸಾವೇ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮೃತನ ಕುಟುಂಬಸ್ಥರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ತನಿಖೆಯ ಅಂತಿಮ ವರದಿಯ ಬಳಿಕವೇ ಪ್ರಕರಣದ ನಿಜಸ್ವರೂಪ ಬಹಿರಂಗವಾಗುವ ಸಾಧ್ಯತೆ ಇದೆ.
