
ಬೆಳಗಾವಿ
ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಯನ್ನು ಕನ್ನಡ ಭಾಷೆಯಲ್ಲಿಯೇ ನಡೆಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕರು ಹಲವು ವರ್ಷಗಳಿಂದ ಕನ್ನಡದಲ್ಲಿಯೇ ಬೋಧನೆ ಮಾಡುತ್ತಿದ್ದು, ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಮಾತ್ರ ಮರಾಠಿ ಅಥವಾ ಇತರ ಭಾಷೆಗಳಲ್ಲಿ ನಡೆಸುತ್ತಿರುವುದರಿಂದ ಕನ್ನಡ ಮಾಧ್ಯಮ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದ್ದಾರೆ.
ಇದರಿಂದ ಅನೇಕ ಅರ್ಹ ಅಭ್ಯರ್ಥಿಗಳು ಉದ್ಯೋಗಾವಕಾಶಗಳಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಿಕ್ಷಣ ಕ್ಷೇತ್ರದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಗಡಿ ಭಾಗದ ಕನ್ನಡಿಗರ ಭಾಷಾ ಹಕ್ಕು ಹಾಗೂ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವುದು ಕರ್ನಾಟಕ ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕು. ಕನ್ನಡ ಮಾಧ್ಯಮ ಶಿಕ್ಷಕರಿಗೆ ಕನ್ನಡ ಭಾಷೆಯಲ್ಲಿಯೇ ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ರಾಜ್ಯ ಸಂಚಾಲಕ ಸುರೇಶ ಗವನ್ನವರ, ಉಪಾಧ್ಯಕ್ಷ ಗಣೇಶ್ ರೋಕಡೆ, ರಾಜು ನಾಶಿಪುಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಶರಥ ಬನೋಶಿ, ಜಿಲ್ಲಾ ಸಂಚಾಲಕರಾದ ಹೊಳೆಪ್ಪ ಸುಳದಾಳ್, ಅಡಿವೆಪ್ಪ ತಲ್ಲೂರಿ, ರೇಖಾ ಲೋಕರಿ, ತೃಪ್ತಿ ಹಿರೇಮಠ ಸೇರಿದಂತೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
