
ಬೆಳಗಾವಿ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಮನೆ ರಿಪೇರಿ ವೇಳೆ ಮನೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಕಳೆದೊಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸೊರುತ್ತಿದ್ದ ಲಕ್ಷ್ಮೀಬಾಯಿ ನಂದಗೊಂಡ ಅವರ ಮನೆಯ ರಿಪೇರಿ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಮನೆ ಕುಸಿದು ಬಿದ್ದ ಪರಿಣಾಮ ಕಾರ್ಮಿಕರಾದ ಮಾದೇವ್ ಕೃಷ್ಣಪ್ಪ ಬಡಿಗೇರ್ (48) ಹಾಗೂ ಸೈಯದ್ ಕೆಂಪವಾಡಿ (32) ಮಣ್ಣಿನ ಅಡಿಯಲ್ಲಿ ಸಿಲುಕಿದರು. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಮಹಾರಾಷ್ಟ್ರದ ಜತ್ತ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟುದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
