Monday, November 23, 2026
HomeBelagaviಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತೇ ವಾಗ್ವಾದ

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತೇ ವಾಗ್ವಾದ

ಬೆಳಗಾವಿ
ಮಹಾನಗರ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮತ್ತೆ ಭಿನ್ನಾಭಿಪ್ರಾಯ ಬಹಿರಂಗವಾಗಿದ್ದು, ಮುಖಂಡರ ನಡುವೆ ವಾಗ್ವಾದ ನಡೆದ ಘಟನೆ ಮಂಗಳವಾರ ನಡೆದಿದೆ.
ಕಳೆದ ಎರಡು ದಿನಗಳಿಂದ ಎಐಸಿಸಿ ವತಿಯಿಂದ ಮಹಾನಗರ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂಬಂಧ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ವಿಚಾರದಲ್ಲಿ ಕಾಂಗ್ರೆಸ್‌ನ ವಿವಿಧ ಬಣಗಳ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ. ಇದೇ ಹಿನ್ನೆಲೆಯಲ್ಲಿ ನಡೆದ ಸಭೆಯ ವೇಳೆ ಫಯಿಮ್ ನಾಯಕವಾಡಿ ಹಾಗೂ ಪಾಲಿಕೆ ಸದಸ್ಯ ಅಜೀಂ ಪಟವೇಗಾರ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಇಬ್ಬರೂ ತಮ್ಮ ತಮ್ಮ ಬಣದ ಅಭ್ಯರ್ಥಿಗೆ ಬೆಂಬಲ ಸೂಚಿಸುವ ವೇಳೆ ವಾಗ್ವಾದ ತಾರಕಕ್ಕೇರಿದ್ದು, ಕೆಲಕಾಲ ಕಾಂಗ್ರೆಸ್ ಕಚೇರಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಕಳೆದ ಎರಡು ದಿನಗಳಿಂದ ಎಐಸಿಸಿ ವೀಕ್ಷಕರು ಹಾಗೂ ಪಕ್ಷದ ಮುಖಂಡರು ಸ್ಥಳೀಯ ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದು, ಅಧ್ಯಕ್ಷರ ಆಯ್ಕೆ ಕುರಿತಂತೆ ಒಮ್ಮತದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ವಿವಿಧ ಬಣಗಳ ನಡುವೆ ಒಮ್ಮತ ಮೂಡದ ಕಾರಣ ಸಭೆಯಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ.
ವಾಗ್ವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಮಧ್ಯಪ್ರವೇಶಿಸಿ ಎರಡೂ ಬಣಗಳ ಮುಖಂಡರನ್ನು ಸಮಾಧಾನಪಡಿಸಿದರು. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಶಾಂತವಾಗಿರಬೇಕು ಹಾಗೂ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ಮನವರಿಕೆ ಮಾಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಮಹಾನಗರ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಸಂದರ್ಭದಲ್ಲೇ ಮತ್ತೆ ಬಣ ರಾಜಕೀಯ ಬಹಿರಂಗವಾಗಿರುವುದು ಬೆಳಗಾವಿ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೈಕಮಾಂಡ್ ಯಾರಿಗೆ ಅಧ್ಯಕ್ಷ ಸ್ಥಾನ ನೀಡಲಿದೆ ಎಂಬುದರ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ತೀವ್ರ ಕುತೂಹಲ ಮನೆ ಮಾಡಿದೆ.

Total Views 65
RELATED ARTICLES

Most Popular

Recent Comments

KNN City News
Home
E-Paper