
ಬೆಳಗಾವಿ
ಜಿಲ್ಲೆಯಲ್ಲಿ ಒಂದು ಕಡೆ ಮಳೆ, ಒಂದು ಬರ ಕೆಲ ಕಡೆಗಳಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜಮಖಂಡಿ, ಮೀರಜ್ ರಾಜ್ಯ ಹೆದ್ದಾರಿಯಲ್ಲಿರುವ ಕುಡಚಿ,ಉಗಾರಖುರ್ದ್ ಸಂಪರ್ಕ ಸೇತುವೆ ಭಾನುವಾರ ಮತ್ತೆ ಸಂಪೂರ್ಣ ಮುಳುಗಡೆಯಾಗಿದೆ. ಇದರೊಂದಿಗೆ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಹಾಗೂ ಮಹಾರಾಷ್ಟ್ರದ ಉಗಾರಖುರ್ದ್ ನಡುವಿನ ಪ್ರಮುಖ ಸಂಪರ್ಕ ಸೇತುವೆ ಇದಾಗಿದ್ದು, ಇದೇ ಎರಡನೇ ಬಾರಿಗೆ ಪ್ರವಾಹದ ನೀರಿನಲ್ಲಿ ಮುಳುಗಡೆಯಾಗಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಈ ವರ್ಷ ಮುಳುಗಡೆಯಾದ ಎಂಟನೇ ಸೇತುವೆ ಇದಾಗಿದೆ.
ಈ ಸೇತುವೆ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ಪ್ರತಿದಿನ ನೂರಾರು ಬಸ್ಗಳು, ಲಾರಿಗಳು ಹಾಗೂ ಇತರೆ ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಸೇತುವೆ ಮುಳುಗಡೆಯಾದ ಕಾರಣ ವಾಹನ ಸವಾರರು ಸುಮಾರು 50 ಕಿಲೋಮೀಟರ್ ಸುತ್ತುವರೆದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕುಡಚಿ ಪೊಲೀಸರು ಸೇತುವೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ. ಪ್ರವಾಹ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ನೀರಿನ ಮಟ್ಟ ಇಳಿದ ಬಳಿಕವೇ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
