
ಬೆಂಗಳೂರು
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಸಂಬಂಧಿಸಿದ 21 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೋಲ್ಕತ್ತಾದ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆಸಲಾಗಿದೆ.
ಸತೀಶ್ ಜಾರಕಿಹೊಳಿ, ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಚಿವರ ಆಪ್ತರು ಹಾಗೂ ವೈ. ಮಂಜುನಾಥ್ ಸೇರಿದಂತೆ ಕೆಲವರ ಮನೆ ಮತ್ತು ಕಚೇರಿಗಳಲ್ಲೂ ಶೋಧ ನಡೆದಿದೆ.
ವಿದೇಶಿ ಹೂಡಿಕೆ ಹಾಗೂ ಕ್ರಾಸ್ಬಾರ್ಡರ್ ವ್ಯವಹಾರಗಳ ಕುರಿತು ಇಡಿ ತನಿಖೆ ನಡೆಸುತ್ತಿದೆ. ಕಾಂಗೋದಲ್ಲಿನ ಗಣಿಗಾರಿಕೆ ಸಂಸ್ಥೆಯೊಂದರಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಶೇ.40ರಷ್ಟು ಪಾಲು ಇರುವುದಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು ಇಡಿ ತಿಳಿಸಿದೆ.
ಶೋಧದ ವೇಳೆ ವಿದೇಶಿ ಸಂಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಅಲ್ಲದೆ, ಲೆಕ್ಕಕ್ಕೆ ತೋರಿಸದ 3.3 ಕೋಟಿ ನಗದು, ಸುಮಾರು 15 ಲಕ್ಷ ಮೌಲ್ಯದ ಡಾಲರ್, ಯುರೋ ಸೇರಿದಂತೆ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.
ಇದರೊಂದಿಗೆ ಲೋಕೋಪಯೋಗಿ ಕಾಮಗಾರಿಗಳು ಹಾಗೂ ಗುತ್ತಿಗೆದಾರರಿಂದ ಲಂಚ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ವಿದೇಶಿ ಹೂಡಿಕೆ, ಗಡಿಯಾಚೆಗಿನ ಹಣಕಾಸು ವ್ಯವಹಾರಗಳು ಹಾಗೂ ಇತರೆ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಇಡಿ ತನಿಖೆ ಇನ್ನೂ ಮುಂದುವರಿದಿದೆ ಎಂದು ಇಡಿ ಎಕ್ಸ್ ಖಾತೆಯಲ್ಲಿ ಪ್ರಕಟಣೆ ಹೊರಡಿಸಿದೆ.
