
ಬೆಳಗಾವಿ
ದಸರಾ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸುವ ಸಂಭ್ರಮ ಹೆಚ್ಚಾಗಲಿದ್ದು, ಈ ವೇಳೆ ಅಪಾಯಕಾರಿ ಮಾಂಜಾ ದಾರ ಬಳಸದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಂಜಾ ದಾರದಿಂದ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಗುರುವಾರ ಬೆಳಗಾವಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೊಬ್ಬನ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಮೃತಪಟ್ಟಿರುವ ಘಟನೆ ನೋವಿನ ಸಂಗತಿಯಾಗಿದೆ. ಇಂತಹ ದುರಂತಗಳು ಮರುಕಳಿಸದಂತೆ ಸಾರ್ವಜನಿಕರು ಜಾಗ್ರತೆ ವಹಿಸಬೇಕು. ಹಬ್ಬದ ಸಂಭ್ರಮದಲ್ಲಿ ನಿರ್ಲಕ್ಷ್ಯ ವಹಿಸಿ ಇನ್ನೊಬ್ಬರ ಜೀವಕ್ಕೆ ಅಪಾಯ ತಂದೊಡ್ಡಬಾರದು ಎಂದು ಹೇಳಿದರು.
ಮಾಂಜಾ ದಾರದ ಮಾರಾಟ ಮತ್ತು ಬಳಕೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಆದರೂ ಕೆಲವರು ಇದನ್ನು ಮಾರಾಟ ಮಾಡುವ ಅಥವಾ ಬಳಸುವ ಸಾಧ್ಯತೆ ಇರುವುದರಿಂದ ಪೊಲೀಸರು ನಿಗಾ ವಹಿಸಲಿದ್ದಾರೆ. ಯಾವುದೇ ವ್ಯಾಪಾರಿಗಳು ಮಾಂಜಾ ದಾರ ಮಾರಾಟ ಮಾಡುವುದು ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಗಾಳಿಪಟ ಹಾರಿಸುವವರು ಸುರಕ್ಷತೆಗೆ ಆದ್ಯತೆ ನೀಡಬೇಕು. ವ್ಯಾಪಾರಿಗಳು ಮಾಂಜಾ ದಾರ ಮಾರಾಟ ಮಾಡಬಾರದು ಹಾಗೂ ಸಾರ್ವಜನಿಕರು ಅದನ್ನು ಖರೀದಿಸಬಾರದು. ಜೀವಹಾನಿ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
