Friday, November 20, 2026
HomeBelagaviಟಿಪ್ಪರ್‌ಗೆ ಸಾರಿಗೆ ಬಸ್ ಡಿಕ್ಕಿ: ಚಾಲಕನ ಸಾವು: 12 ಪ್ರಯಾಣಿಕರಿಗೆ ಗಂಭೀರ ಗಾಯ

ಟಿಪ್ಪರ್‌ಗೆ ಸಾರಿಗೆ ಬಸ್ ಡಿಕ್ಕಿ: ಚಾಲಕನ ಸಾವು: 12 ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ
ಟಿಪ್ಪರ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಗಂಗಾವತಿಯಿಂದ ಬೆಳಗಾವಿ ಮಾರ್ಗವಾಗಿ ಕೊಲ್ಹಾಪುರಕ್ಕೆ ಸಂಚರಿಸುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅಪಘಾತಕ್ಕೀಡಾಗಿದೆ. ಟಿಪ್ಪರ್‌ನ ಹಿಂಭಾಗಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಂಗಪ್ಪ ತಳವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸಂಕೇಶ್ವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಗಾಯಾಳುಗಳನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Total Views 226
RELATED ARTICLES

Most Popular

Recent Comments

KNN City News
Home
E-Paper