
ಬೆಳಗಾವಿ
ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಮಂಗಳವಾರ ಮತ್ತಷ್ಟು ತೀವ್ರಗೊಂಡಿದೆ. ಕೆಲ ಆಯ್ದ ರೈತರ ಮುಖಂಡರ ಜೊತೆಗೆ ಸಭೆ ಜಿಲ್ಲಾಡಳಿತ ಅಜ್ಞಾತ ಸ್ಥಳದಲ್ಲಿ ಸಭೆ ನಡೆಸಿದ್ದಾರೆ ಎಂದು ಆರೋಪಿಸಿ ಏಕಾಏಕ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಬೇಕಿದ್ದ ಸಭೆ ಆರಂಭವಾಗದ ಹಿನ್ನೆಲೆಯಲ್ಲಿ ಮಧ್ಯಾಹ್ನದಿಂದಲೂ ಸಭೆಗಾಗಿ ಕಾಯುತ್ತಿದ್ದ ರೈತರ ಆಕ್ರೋಶ ಸ್ಫೋಟಗೊಂಡಿದ್ದು, ಡಿಸಿ ಕಚೇರಿ ಮುಂಭಾಗದ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ರೈತರು ದಿಢೀರ್ ರಸ್ತೆ ತಡೆ ನಡೆಸಿ, ಬಸ್‌ಗಳನ್ನು ತಡೆಹಿಡಿದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಸಭೆಗಾಗಿ ಗಂಟೆಗಟ್ಟಲೆ ಕಾಯುತ್ತಿದ್ದರೂ ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ದೊರೆಯದಿರುವುದು ರೈತರ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.
ಇನ್ನೊಂದೆಡೆ, ರೈತರ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಗೌಪ್ಯ ಸ್ಥಳದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ರೈತ ಮುಖಂಡರಾದ ಚುನ್ನಪ್ಪ ಪೂಜಾರಿ, ಶಶಿಕಾಂತ ಗುರೂಜಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಭಾಗವಹಿಸಿದ್ದಾರೆ.
